ಕಾಂಗ್ರೆಸ್ ಮತ್ತು ಜೆಡಿಎಸ್ ಪಾಳಯದಲ್ಲಿ ನಡುಕ ಹುಟ್ಟಿಸಿದ್ದ ಮುದ್ದಹನುಮೇಗೌಡ ಅವರ ಮನವೊಲಿಸುವುದರಲ್ಲಿ ಕಾಂಗ್ರೆಸ್ ನಾಯಕರು ಕೊನೆಗೂ ಯಶಸ್ವಿಯಾಗಿದ್ದಾರೆ. ಇದರಿಂದ ಮೈತ್ರಿಪಕ್ಷಗಳು ನೆಮ್ಮದಿಯ ಉಸಿರುಬಿಡುವಂತಾಗಿದೆ.ಕಾಂಗ್ರೆಸ್‍ನ ಬಂಡಾಯ ಅಭ್ಯರ್ಥಿಗಳಾದ ಮುದ್ದಹನುಮೇಗೌಡ ಮತ್ತು ಕೆ.ಎನ್. ರಾಜಣ್ಣ ಅವರಿಬ್ಬರೊಂದಿಗೂ ಸಿದ್ದರಾಮಯ್ಯ ಅವರು ತಮ್ಮ ನಿವಾಸ ಕಾವೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜತೆಗೂಡಿ ಸತತ ಸಭೆ ನಡೆಸಿದ್ದಾರೆ.
ಸಂಜಯನಗರದಲ್ಲಿರುವ ಮುದ್ದಹನುಮೇಗೌಡ ಮನೆಗೆ ಶುಕ್ರವಾರ ಬೆಳಗ್ಗೆ ಉಪಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ದಿನೇಶ್ ಗುಂಡೂ ರಾವ್ ಆಗಮಿಸಿ ಮಾತುಕತೆ ನಡೆಸಿದರು.ಸಂಸದ ಮುದ್ದೇಹನುಮಗೌಡ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ ಕಾರಣಕ್ಕಾಗಿ ಕಾಂಗ್ರೆಸ್ ನ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ನಾಮಪತ್ರವನ್ನು ಹಿಂಪಡೆಯುವಂತೆ ಕಾಂಗ್ರೆಸ್ ನಾಯಕರು ಒತ್ತಡ ಹಾಕುತ್ತಿದ್ದಾರೆ. ಈಗ ಈ ಪ್ರಯತ್ನದಲ್ಲಿ ಯಶಸ್ಸು ಕೂಡ ಸಾಧಿಸಿದ್ದಾರೆ.
ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಕಣಕ್ಕಿಳಿದಿದ್ದಾರೆ. ಯಾವುದೇ ಕಾರಣಕ್ಕೂ ನಾಮಪತ್ರ ವಾಪಸ್ ಪಡೆಯಲ್ಲ ಎಂದು ಮುದ್ದಹನುಮೇಗೌಡರು ಪಟ್ಟು ಹಿಡಿದಿದ್ದರು.
ನಾಮಪತ್ರ ಹಿಂಪಡೆಯುವ ಭರವಸೆ :
ತುಮಕೂರು ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಎಸ್.ಪಿ.ಮುದ್ದಹನುಮೇಗೌಡರು, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರೊಂದಿಗೆ ಮಾತುಕತೆ ನಡೆಸಿದ್ದ ಬಳಿಕ ನಾಮಪತ್ರ ಹಿಂಪಡೆಯುವ ಭರವಸೆ ವ್ಯಕ್ತಪಡಿಸಿದರು.ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕಿದೆ. ಹೈಕಮಾಂಡ್ ನಿರ್ಧಾರದಿಂದಾಗಿ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿದ್ದೆ. ಆದರೆ, ಮೈತ್ರಿ ಧರ್ಮಕ್ಕೆ ಹಿನ್ನಡೆಯಾಗುತ್ತದೆ ಎಂಬ ಕಾರಣಕ್ಕೆ ಮುಖಂಡರು ನಮ್ಮ ಮನವೊಲಿಸಿದ್ದಾರೆ.
ತಮ್ಮ ನಿವಾಸಕ್ಕೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಮುಂದೆ ಉತ್ತಮ ಅವಕಾಶ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ವ್ಯತಿರಿಕ್ತ ನಿರ್ಧಾರ ತೆಗೆದುಕೊಳ್ಳದಂತೆ ಅವರು ತಿಳಿಸಿದ್ದಾರೆ ಎಂದರು.ಇದೇ ಸಂದರ್ಭದಲ್ಲಿ ಮಾತನಾಡಿದ ದಿನೇಶ್‍ಗುಂಡೂರಾವ್, ಅವರು ಪಕ್ಷದ ನಿಷ್ಟಾವಂತರು. ಎಲ್ಲಾ ಜವಾಬ್ದಾರಿಯಿಂದ ನಿರ್ವಹಿಸಿದ್ದಾರೆ. ಆದರೆ, ಮೈತ್ರಿ ಧರ್ಮವನ್ನು ಪಾಲಿಸಬೇಕಿರುವುದರಿಂದ ಪಕ್ಷದಿಂದ ಮನವಿ ಮಾಡಿದ್ದೇವೆ ಎಂದರು. ಗೌರವಯುತವಾಗಿ ನಡೆಸಿಕೊಳ್ಳುತ್ತೇವೆ. ಮುಂದೆ ಉತ್ತಮ ಅವಕಾಶವನ್ನೂ ನೀಡುವ ಭರವಸೆಯನ್ನೂ ನೀಡಿದ್ದೇವೆ.
No comments:
Post a Comment